ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಮುದರಂಗಡಿ ಡೇವಿಡ್ ಡಿಸೋಜ ಅವರ ಹತ್ಯೆ, ಯುಪಿಸಿಎಲ್ ಗುತ್ತಿಗೆಗೆ ಸಂಬಂಧಿಸಿದ ಹಣಕಾಸಿನ ವಿಚಾರದಲ್ಲಿನ ಭಿನ್ನಾಭಿಪ್ರಾಯದಿಂದ ನಡೆದಿರುವುದು ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್ಪಿ, ಡೇವಿಡ್ ಹತ್ಯೆಗೆ ಉತ್ತರ ಭಾರತದ ವ್ಯಕ್ತಿಯೊಬ್ಬರು ಸುಪಾರಿ ನೀಡಿರುವ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ ಎಂದು ಹೇಳಿದರು. ಸುಪಾರಿ ನೀಡಿದ ವ್ಯಕ್ತಿಯ ಗುರುತು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡವನ್ನು ಹೊರರಾಜ್ಯಕ್ಕೆ ಕಳುಹಿಸಲಾಗಿದೆ.
ಪ್ರಕರಣದ ಎ1 ಆರೋಪಿ ಶೂಟರ್ ರಾಜು ಅವರ ಬ್ಯಾಂಕ್ ಖಾತೆಗೆ ಎರಡು ಲಕ್ಷ ರೂಪಾಯಿಗೂ ಅಧಿಕ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಹತ್ಯೆಗೂ ಮುನ್ನ ಹಾಗೂ ನಂತರ ಹಂತ ಹಂತವಾಗಿ ಹಣ ವರ್ಗಾವಣೆಯಾಗಿರುವುದನ್ನು ಪೊಲೀಸರು ಗುರುತಿಸಿದ್ದಾರೆ. ರಾಜು 9 ಎಂಎಂ ಪಿಸ್ತೂಲ್ ಬಳಸಿ ಡೇವಿಡ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಪಿಸ್ತೂಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ತಿಳಿಸಿದರು.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬೈಂದೂರಿನ ಒತ್ತಿನೆಣೆ, ಭಟ್ಕಳ ಮತ್ತು ಕುಮಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಂಧಿಸಲಾಗಿದೆ. ಘಟನೆ ನಡೆದ ಬಳಿಕ ಆರೋಪಿಗಳು ಉಡುಪಿ ಜಿಲ್ಲೆಯಿಂದ ತಪ್ಪಿಸಿಕೊಳ್ಳದಂತೆ ಜಿಲ್ಲೆಯ ಗಡಿಭಾಗಗಳಲ್ಲಿ ನಾಕಾಬಂದಿ ನಡೆಸಲಾಗಿತ್ತು. ಉಡುಪಿ ಮತ್ತು ಭಟ್ಕಳ ರೈಲು ನಿಲ್ದಾಣಗಳಲ್ಲಿಯೂ ತೀವ್ರ ತಪಾಸಣೆ ಕೈಗೊಳ್ಳಲಾಗಿತ್ತು.
ಪ್ರಕರಣದ ತನಿಖೆಗೆ ರೈಲ್ವೆ ಪೊಲೀಸರು ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸರ ಸಹಕಾರ ಪಡೆಯಲಾಗಿದ್ದು, ತನಿಖಾ ಕಾರ್ಯದಲ್ಲಿ 500ಕ್ಕೂ ಹೆಚ್ಚು ಪೊಲೀಸರು ಭಾಗಿಯಾಗಿದ್ದಾರೆ ಎಂದು ಹರಿರಾಮ್ ಶಂಕರ್ ವಿವರಿಸಿದರು.





