ಮಂಗಳೂರು: ಮಳೆ ಹಾಗೂ ಬಿಸಿಲಿನ ನಡುವೆ ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಿಲ್ಲಾದ್ಯಂತ ಮಲೇರಿಯಾ ನಿಯಂತ್ರಣ ಹಾಗೂ ಕಣ್ಗಾವಲು ಕ್ರಮಗಳನ್ನು ಹೆಚ್ಚಿಸಿದೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹೊರ ರಾಜ್ಯಗಳಿಂದ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಜಿಲ್ಲೆಗೆ ಆಗಮಿಸುತ್ತಿರುವ ಕಾರ್ಮಿಕರಲ್ಲಿಯೂ ಪ್ರಕರಣಗಳು ಪತ್ತೆಯಾಗುತ್ತಿರುವುದು ಆರೋಗ್ಯ ಇಲಾಖೆಯ ಗಮನಕ್ಕೆ ಬಂದಿದೆ.
ಮಳೆ ನಡುವೆ ಬಿಸಿಲು ಕಾಣಿಸಿಕೊಳ್ಳುತ್ತಿರುವುದರಿಂದ ವಿವಿಧೆಡೆ ನೀರು ನಿಂತು ಸೊಳ್ಳೆಗಳು ಬೆಳೆಯಲು ಅನುಕೂಲವಾಗುವ ಪರಿಸ್ಥಿತಿ ನಿರ್ಮಾಣವಾಗಬಹುದು. ಹೀಗಾಗಿ ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ಒತ್ತಾಯಿಸಿದೆ.
ಮನೆಯ ಸುತ್ತಮುತ್ತಲಿನ ಹೂವಿನ ಕುಂಡಗಳ ತಟ್ಟೆಗಳು, ಬಕೆಟ್‌ಗಳು, ಹಳೆಯ ಟೈರ್‌ಗಳು, ತೆಂಗಿನ ಚಿಪ್ಪುಗಳು ಹಾಗೂ ತೆರೆದ ಪಾತ್ರೆಗಳಲ್ಲಿ ನೀರು ಸಂಗ್ರಹವಾಗಿದ್ದರೆ ಅವುಗಳನ್ನು ತೆರವುಗೊಳಿಸುವುದು ಅಗತ್ಯ.
ನೀರಿನ ಟ್ಯಾಂಕ್‌ಗಳು ಮತ್ತು ಇತರ ಸಂಗ್ರಹಣಾ ಪಾತ್ರೆಗಳನ್ನು ಮುಚ್ಚಿಡಬೇಕು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು.
ಜ್ವರ, ಚಳಿ, ನಡುಕ, ತಲೆನೋವು, ಮೈಕೈ ನೋವು, ಬೆವರು ಅಥವಾ ಅತಿಯಾದ ಸುಸ್ತು ಸೇರಿದಂತೆ ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಮಲೇರಿಯಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಕ್ರಮಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಅತ್ಯಂತ ಮುಖ್ಯವಾಗಿದೆ.





