18 August 2026 |

ವಿಟ್ಲದಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; 53 ವರ್ಷದ ವ್ಯಕ್ತಿ ಬಂಧನ

  • 18 Aug 2026 05:02:39 PM

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಜೊತೆಗೆ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಿಂದ ವ್ಯಕ್ತಿಯೊಬ್ಬರು ಕುಳಿತುಕೊಂಡಿದ್ದರು ಎನ್ನಲಾಗಿದೆ. ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

 

ಬಳಿಕ ಬಾಲಕ ಮನೆಗೆ ತೆರಳಿದ ನಂತರ ಅದೇ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಈ ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 179/2026ರಂತೆ ಪೋಕ್ಸೋ ಕಾಯ್ದೆ-2012ರ ಕಲಂ 4(2) ಹಾಗೂ ಬಿಎನ್‌ಎಸ್-2023ರ ಕಲಂ 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

 

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.