ಬೆಂಗಳೂರು: ಕರ್ನಾಟಕದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರು ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ತಿಪಟೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ವಿದ್ಯಾರ್ಥಿ ಜೀವನದಲ್ಲಿ ABVPಯಲ್ಲಿ ಸಕ್ರಿಯರಾಗಿದ್ದ ನಾಗೇಶ್ ಅವರು 1984ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ನಾಯಕರು ಹಾಗೂ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಾಗೇಶ್ ಅವರ ಪಾರ್ಥಿವ ಶರೀರವನ್ನು ತಿಪಟೂರಿಗೆ ಕೊಂಡೊಯ್ಯಲಾಗುತ್ತಿದ್ದು, ಅಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.





