ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಆರೋಪದ ಮೇಲೆ ಉಳ್ಳಾಲ ಮೂಲದ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂಬಾತನನ್ನು ಪೊಲೀಸರು ಆಗಸ್ಟ್ 18ರಂದು ಬಂಧಿಸಿದ್ದಾರೆ.
ಜುಲೈ 24ರಂದು ಕೋಡಿಕಲ್‌ನ ಮನೆಯೊಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಆರೋಪಿ ಕಳವು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಉರ್ವ ಠಾಣೆ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ದೃಶ್ಯಗಳ ಆಧಾರದ ಮೇಲೆ ಆರೋಪಿಯ ಗುರುತು ಪತ್ತೆಹಚ್ಚಿ, ಬಳಿಕ ಆತನನ್ನು ಬಂಧಿಸುವುದರ ಜೊತೆಗೆ ಕಳವಾಗಿದ್ದ ಸ್ಕೂಟರ್‌ನ್ನೂ ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಕೇರಳದಲ್ಲಿ 40ಕ್ಕೂ ಹೆಚ್ಚು ಪ್ರಕರಣ
ಬಂಧಿತ ಮಹಮ್ಮದ್ ಫೈಜಲ್ ವಿರುದ್ಧ ಕರ್ನಾಟಕ ಮತ್ತು ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗಳೂರಿನ ಬಂದರು, ಕೊಣಾಜೆ, ಉಳ್ಳಾಲ, ಮೂಡುಬಿದಿರೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲೂ, ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲೂ ಆತನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆತನ ವಿರುದ್ಧ ಬಂಧನ ವಾರಂಟ್ ಕೂಡ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.





