ಬಂಟ್ವಾಳ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಆತಂಕಕ್ಕೆ ಕಾರಣವಾದ ಆರೋಪದ ಹಿನ್ನೆಲೆಯಲ್ಲಿ 47 ವರ್ಷದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಾಲಕಿಯನ್ನು ಕಳೆದ ಕೆಲ ದಿನಗಳಿಂದ ಅಪರಿಚಿತ ವ್ಯಕ್ತಿಯೊಬ್ಬ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಘಟನೆಗಳಿಂದ ಬಾಲಕಿ ಭಯಗೊಂಡಿದ್ದಳು ಎಂದು ತಿಳಿದುಬಂದಿದೆ.
ಆಗಸ್ಟ್ 19ರ ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಿದ್ದ ವೇಳೆ, ಈ ವ್ಯಕ್ತಿ ಅಲ್ಲಿಯೂ ಕಾಣಿಸಿಕೊಂಡಿದ್ದಾನೆ. ಆತ ತನ್ನನ್ನು ಗಮನಿಸುತ್ತಿರುವುದನ್ನು ಕಂಡ ಬಾಲಕಿ ಆತಂಕಗೊಂಡು, ಬಳಿಕ ತನ್ನ ತಾಯಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಘಟನೆ ಕುರಿತು ಮಾಹಿತಿ ನೀಡಿದ್ದಾಳೆ.
ನಂತರ ಬಾಲಕಿಯ ತಾಯಿ ಕಚೇರಿ ಮಾಲೀಕರೊಂದಿಗೆ ಬಸ್ ನಿಲ್ದಾಣಕ್ಕೆ ತೆರಳಿದ್ದು, ಆರೋಪಿತ ವ್ಯಕ್ತಿ ಅಲ್ಲಿಯೇ ಇದ್ದನು ಎನ್ನಲಾಗಿದೆ. ವಿಚಾರಿಸಿದಾಗ ಆತ ತನ್ನ ಹೆಸರು ಜಯಂತ್ ಎಂದು ತಿಳಿಸಿ ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 116/2026ರಂತೆ ಬಿಎನ್‌ಎಸ್ 2023ರ ಕಲಂ 78 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು ಬಂಟ್ವಾಳ ಸರಪಾಡಿ ನಿವಾಸಿ ಜಯಂತ್ (47) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.





