ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಬೆದರಿಕೆ ಹಾಕಿ ಬಳಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಿಕ್ಷಾ ಚಾಲಕನೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಬಾಲಕಿ ಕೆಲವು ತಿಂಗಳುಗಳಿಂದ ಶಾಲೆಗೆ ಪ್ರಯಾಣಿಸುತ್ತಿದ್ದಳು. ಈ ಅವಧಿಯಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಆತನ ವರ್ತನೆಯನ್ನು ಬಾಲಕಿ ವಿರೋಧಿಸಿದ ಸಂದರ್ಭದಲ್ಲಿ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೆದರಿಕೆಯಿಂದಾಗಿ ಬಾಲಕಿ ಘಟನೆ ಕುರಿತು ಯಾರಿಗೂ ಮಾಹಿತಿ ನೀಡದೆ ಇದ್ದಳು ಎನ್ನಲಾಗಿದೆ.
ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ಅಲ್ಲಿಗೆ ಬಂದು ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿ ಆಗಸ್ಟ್ 15ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
ಆಗಸ್ಟ್ 15ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





