ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಉಚಿತವಾಗಿ ನೋಟ್‌ಬುಕ್‌ಗಳನ್ನು ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಘೋಷಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ನೋಟ್‌ಬುಕ್‌ಗಳನ್ನೂ ಉಚಿತವಾಗಿ ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಚಿವರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಅಭಿಪ್ರಾಯಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು.
ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲಾ ಸೌಲಭ್ಯಗಳನ್ನು ಒಂದೇ ಬಾರಿಗೆ ಒದಗಿಸಲು ಸಾಧ್ಯವಿಲ್ಲ. ಹೀಗಾಗಿ ಹಂತ ಹಂತವಾಗಿ ರಾಜ್ಯದ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಅಗತ್ಯವಾದ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಸಂವಾದದ ವೇಳೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಕಾಲೇಜಿನಲ್ಲಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ ಸಚಿವರು, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.





