ಮಂಗಳೂರು/ಉಡುಪಿ: ಈದ್ ಮಿಲಾದ್ ಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ರಂದು (ಮಂಗಳವಾರ) ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಹೀಗಾಗಿ ಎರಡೂ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಹಾಗೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.
ಈದ್ ಮಿಲಾದ್ ಹಬ್ಬವನ್ನು ಆ.25ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಸರ್ಕಾರ ನಿಯಮಾನುಸಾರ ರಜೆ ಘೋಷಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಆದಾಗ್ಯೂ, ಈಗಾಗಲೇ ನಿಗದಿಯಾಗಿರುವ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಉಳಿದ ಭಾಗಗಳಲ್ಲಿ ಆ.26ರಂದು ಸಾರ್ವತ್ರಿಕ ರಜೆ ಇರಲಿದೆ.





