29 August 2026 |

ಧರ್ಮಸ್ಥಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಬೆಂಗಳೂರಿನಲ್ಲಿ ಆರೋಪಿ ಬಂಧನ

  • 28 Aug 2026 11:09:38 AM

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ.

 

ಆಂಧ್ರಪ್ರದೇಶದ ಜಂಗಲ್ಪಲ್ಲಿ ಗ್ರಾಮದ 21 ವರ್ಷದ ಶ್ರೀಕಾಂತ್ ಬಂಧಿತ ಆರೋಪಿ. 2025ರ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿ, ವಿಷಯ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ.

 

ಈ ಘಟನೆಗೆ ಸಂಬಂಧಿಸಿದಂತೆ ಆಗಸ್ಟ್ 23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 60/2026ರಡಿ BNS ಕಲಂ 64(2)(m), 65(1), 351(2) ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

 

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದಲ್ಲಿ ಪೊಲೀಸರು ತನಿಖೆ ಹಾಗೂ ಶೋಧ ಕಾರ್ಯ ನಡೆಸಿದರು. ಕಾರ್ಯಾಚರಣೆಯ ವೇಳೆ ಆಗಸ್ಟ್ 25ರಂದು ದೊಡ್ಡಬಳ್ಳಾಪುರದಲ್ಲಿ ಶ್ರೀಕಾಂತ್‌ನನ್ನು ಬಂಧಿಸಲಾಯಿತು.

 

ಪೊಲೀಸ್ ತಂಡದ ಕಾರ್ಯಾಚರಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್‌ಗಳಾದ ವೃಷಭ್ ಮತ್ತು ಮಹೇಶ್ ಹಾಗೂ ಕಾನ್‌ಸ್ಟೇಬಲ್ ಚರಣ್ ರಾಜ್ ಭಾಗವಹಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

 

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.