ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದ ಮೂಲಕ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ವಿಶೇಷ ತನಿಖಾ ತಂಡ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ಆರಂಭಿಸಿದ ಎರಡು ದಿನಗಳ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಜ್ಞಾನೇಂದ್ರ ಕುಮಾರ್ ಅವರು KPSC ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಭ್ಯರ್ಥಿಗಳ ಅಂಕಗಳಲ್ಲಿ ತಿದ್ದುಪಡಿ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲ ಆರೋಪಗಳ ಕುರಿತು ಸಿಐಡಿಯ ವಿಶೇಷ ತನಿಖಾ ತಂಡ ತನಿಖೆ ಮುಂದುವರಿಸಿದೆ.





