01 September 2026 |

ಸೆ. 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

  • 31 Aug 2026 04:40:44 PM

ಮಂಗಳೂರು: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಂಪುಟ ಸಭೆ ನಡೆಯಲಿದೆ.

 

ಸಭೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕಸ್ತೂರಿ ರಂಗನ್ ವರದಿ, ಪ್ರವಾಸೋದ್ಯಮ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ, ಕಾನೂನು ಮತ್ತು ಸುವ್ಯವಸ್ಥೆ, ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರವೂ ಸಭೆಯ ಪ್ರಮುಖ ವಿಷಯಗಳಲ್ಲಿ ಒಂದಾಗಲಿದೆ.

 

ಇತ್ತೀಚೆಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.