01 September 2026 |

ಮಂಗಳೂರು KRIDL ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಶಾಸಕ ಅಶೋಕ್ ಕುಮಾರ್ ರೈ ಒತ್ತಾಯ

  • 01 Sep 2026 12:03:22 PM

ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನ ಮಂಗಳೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರು ಕಾಮಗಾರಿಗಳ ಗುತ್ತಿಗೆ ಪಡೆದಿರುವವರಿಗೆ ಅನಗತ್ಯ ಒತ್ತಡ ಹೇರುತ್ತಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕುವುದು ಹಾಗೂ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ತಮ್ಮ ಗಮನಕ್ಕೆ ದೂರುಗಳು ಬಂದಿವೆ ಎಂದು ಶಾಸಕ ಅಶೋಕ್ ಕುಮಾರ್ ರೈ ಪತ್ರದಲ್ಲಿ ತಿಳಿಸಿದ್ದಾರೆ.

 

ಇಲಾಖೆಯ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಗುತ್ತಿಗೆದಾರರಿಂದ ಇಬ್ಬರು ಅಧಿಕಾರಿಗಳು ಹಣ ಪಡೆಯುತ್ತಿದ್ದಾರೆ ಎಂಬ ಆರೋಪವನ್ನೂ ಅವರು ಉಲ್ಲೇಖಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಲಾಖೆಯ ಸಚಿವರ ಹೆಸರನ್ನು ಬಳಸಿಕೊಂಡು, ಸಚಿವರಿಗೆ ಪ್ರತಿ ತಿಂಗಳು ಹಣ ನೀಡಬೇಕಿದೆ ಎಂದು ಗುತ್ತಿಗೆದಾರರಿಗೆ ಹೇಳಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಗಂಭೀರ ದೂರುಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

 

ಈ ಸಂಬಂಧ ಹಲವು ಗುತ್ತಿಗೆದಾರರು ತಮ್ಮ ಬಳಿ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾರ್ವಜನಿಕ ಹಣದ ಬಳಕೆ ಹಾಗೂ ಸರ್ಕಾರದ ವಿಶ್ವಾಸಾರ್ಹತೆಗೆ ಸಂಬಂಧಿಸಿದಂತೆ ಗಂಭೀರ ವಿಚಾರವಾಗಿರುವುದರಿಂದ ಕೂಡಲೇ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಪೂರ್ವಾಗ್ರಹವಿಲ್ಲದೆ ಸಂಪೂರ್ಣ ಇಲಾಖಾ ತನಿಖೆ ನಡೆಸಬೇಕು ಎಂದು ಶಾಸಕರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ತನಿಖೆ ಮುಗಿಯುವವರೆಗೆ ಆಡಳಿತಾತ್ಮಕ ಕಾರಣಗಳಿಂದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಬೇರೆಡೆಗೆ ವರ್ಗಾಯಿಸುವಂತೆಯೂ ಅವರು ಮನವಿ ಮಾಡಿದ್ದಾರೆ.