ಮಂಗಳೂರು: ಕರಾವಳಿಯ ಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವಾದ ‘ಮಂಗಳೂರು ದಸರಾ ಮಹೋತ್ಸವ’ಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್ 11ರಿಂದ 21ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಉತ್ಸವ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕ್ಷೇತ್ರಾಡಳಿತ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಹೆಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ ಹಾಗೂ ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ ವೇದಕುಮಾರ್, ಲೀಲಾಕ್ಷ ಕರ್ಕೇರ ಮತ್ತು ಸೂರ್ಯಕಾಂತ್ ಜೆ. ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಕೋಶಾಧಿಕಾರಿ ಯೋಗೀಶ್ ಕುಮಾರ್ ಮೂಲ್ಕಿ ಹಾಗೂ ಕಾರವಾರದ ನ್ಯಾಯವಾದಿ ಜಿ.ಟಿ. ನಾಯ್ಕ ಉಪಸ್ಥಿತರಿದ್ದರು.
ಕ್ಷೇತ್ರದ ವತಿಯಿಂದ ಡಿ.ಕೆ. ಶಿವಕುಮಾರ್ ಅವರಿಗೆ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು. ಈ ವೇಳೆ ಮಂಗಳೂರು ದಸರಾ ಉತ್ಸವದ ಧಾರ್ಮಿಕ ಮಹತ್ವ, ಕರಾವಳಿಯ ಸಾಂಸ್ಕೃತಿಕ ಪರಂಪರೆ ಹಾಗೂ ನವದುರ್ಗೆಯರ ಆರಾಧನೆಯ ವಿಶೇಷತೆಯನ್ನು ಅವರಿಗೆ ವಿವರಿಸಲಾಯಿತು.
ಕುದ್ರೋಳಿ ಕ್ಷೇತ್ರದೊಂದಿಗೆ ಹೊಂದಿರುವ ವಿಶೇಷತೆಯನ್ನು ಉಲ್ಲೇಖಿಸಿದ ಡಿ.ಕೆ. ಶಿವಕುಮಾರ್, ನಾರಾಯಣ ಗುರುಗಳ ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ಪ್ರತಿಬಿಂಬಿಸುವ ಈ ಕ್ಷೇತ್ರಕ್ಕೆ ಭೇಟಿ ನೀಡುವುದು ಸಂತಸದ ಅನುಭವ ಎಂದರು. ಕರಾವಳಿಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿನಿಧಿಸುವ ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು.





