ಉಪ್ಪಿನಂಗಡಿ: ಪೆರ್ನೆ ಸಮೀಪ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೃತರನ್ನು ಸೇವಾ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಮನೆಯೊಳಗೆ ಮೃತದೇಹ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದರೂ, ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕವೇ ಸಾವಿನ ಹಿಂದಿರುವ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆಯಿದೆ.
ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗಷ್ಟೇ ಅವರ ಪುತ್ರಿಯೊಬ್ಬರ ವಿವಾಹ ನೆರವೇರಿಸಿದ್ದರು ಎನ್ನಲಾಗಿದೆ. ಓಡಿಯೂರಿನಲ್ಲಿ ಈ ಹಿಂದೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.





