06 September 2026 |

ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೆಂಕಿಗಾಹುತಿ; 37 ಪ್ರಯಾಣಿಕರು ಸುರಕ್ಷಿತ

  • 06 Sep 2026 10:37:10 AM

ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಲಿಸುತ್ತಿದ್ದ ವೇಳೆ ಬೆಂಕಿಗಾಹುತಿಯಾದ ಘಟನೆ ಶನಿವಾರ (ಸೆ. 5) ತಡರಾತ್ರಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿಲ್‌ ಎಂಬಲ್ಲಿ ನಡೆದಿದೆ.

 

ಬಸ್‌ ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ಕೂಡಲೇ ಸಮಯಪ್ರಜ್ಞೆ ಮೆರೆದು ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಯುವಂತೆ ಸೂಚಿಸಿದ್ದಾರೆ.

 

ಚಾಲಕನ ಸಮಯೋಚಿತ ಕ್ರಮದಿಂದ ಬಸ್‌ನಲ್ಲಿದ್ದ ಎಲ್ಲ 37 ಪ್ರಯಾಣಿಕರೂ ಸುರಕ್ಷಿತವಾಗಿ ಹೊರಬರಲು ಸಾಧ್ಯವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 

ಪ್ರಯಾಣಿಕರು ಬಸ್‌ನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ವೇಗವಾಗಿ ಇಡೀ ಬಸ್‌ಗೆ ವ್ಯಾಪಿಸಿದೆ. ಪರಿಣಾಮ ಬಸ್‌ ಧಗಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಹಾನಿಗೊಳಗಾಗಿದೆ.

 

ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು

ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಸ್ಥಳೀಯರು ಹಾಗೂ ಬಸ್‌ ಸಿಬ್ಬಂದಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

 

ಕಡಬ ಪೊಲೀಸ್‌ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಬಸ್‌ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಕಾರಣವೇನು ಎಂಬುದು ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.