ತ್ರಿಶೂರ್: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಎಡಕ್ಕಳಿಯೂರು ನಿವಾಸಿಗಳಾದ ಮುನೀರ್ (35), ಅವರ ಪತ್ನಿ ಶಿಫಾ (28) ಮತ್ತು ಮೂರು ವರ್ಷದ ಪುತ್ರ ಮೊಹಮ್ಮದ್ ಅಮೀನ್ ಐಬಕ್ ಮೃತಪಟ್ಟಿದ್ದಾರೆ.
ಚಾವಕ್ಕಾಡ್ ಸಮೀಪದ ಎಡಕ್ಕಳಿಯೂರಿನ ಈ ಕುಟುಂಬವು ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿತ್ತು. ರಾತ್ರಿ ಸುಮಾರು 11.30ರ ವೇಳೆಗೆ ಗುರುವಾರಾಯೂರು–ಕುನ್ನಂಕುಳಂ ರಸ್ತೆಯ ಕುರಕ್ಕನ್‌ಪಾರ ಸೆಂಟರ್ ಬಳಿ ಫೋನ್ ಕರೆ ಸ್ವೀಕರಿಸುವ ಸಲುವಾಗಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿದ್ದರು.
ಅದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರು ಸುಮಾರು 50 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮುನೀರ್ ಮತ್ತು ಶಿಫಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು. ಅವರ ಪುತ್ರ ಅಮೀನ್ ಐಬಕ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳೀಯರ ಪ್ರಕಾರ ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬಂದಿದ್ದಾನೆ ಎನ್ನಲಾಗಿದ್ದು, ಈ ಆರೋಪದ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





