ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಬೆಂಕಿಗೆ ಆಹುತಿಯಾಗಿದೆ.
ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬೋಗಿಗೆ ವ್ಯಾಪಿಸಿದ್ದು, ದಟ್ಟ ಹೊಗೆ ನಿಲ್ದಾಣದ ಸುತ್ತಮುತ್ತ ಆವರಿಸಿತ್ತು.
ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಿಯಂತ್ರಿಸುವ ಜೊತೆಗೆ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





