09 September 2026 |

ಕಬಕ-ಪುತ್ತೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಒತ್ತಾಯ: ರೈಲ್ವೆ ಸಚಿವರಿಗೆ ಎಂಎಲ್‌ಸಿ ಕಿಶೋರ್ ಕುಮಾರ್ ಮನವಿ

  • 09 Sep 2026 10:12:26 AM

ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲು ಉದ್ದೇಶಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

ರೈಲಿನ ವೇಳಾಪಟ್ಟಿ ಹಾಗೂ ನಿಲುಗಡೆ ನಿಲ್ದಾಣಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿರುವುದರಿಂದ, ಕಬಕ-ಪುತ್ತೂರು ನಿಲ್ದಾಣವನ್ನೂ ಪಟ್ಟಿಗೆ ಸೇರಿಸುವಂತೆ ಅವರು ಮನವಿ ಸಲ್ಲಿಸಿದ್ದಾರೆ.

 

ಕಬಕ-ಪುತ್ತೂರು ರೈಲು ನಿಲ್ದಾಣವು ಪುತ್ತೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳ ಜನರಿಗೆ ಪ್ರಮುಖ ಸಾರಿಗೆ ಸಂಪರ್ಕ ಕೇಂದ್ರವಾಗಿದೆ. ಈ ಭಾಗದಿಂದ ಬೆಂಗಳೂರಿಗೆ ಐಟಿ ಉದ್ಯೋಗಿಗಳು, ವ್ಯಾಪಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯದ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ. ಹೀಗಾಗಿ ವಂದೇ ಭಾರತ್ ರೈಲು ಇಲ್ಲಿ ನಿಲುಗಡೆ ಹೊಂದಿದರೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ.

 

ಇದಲ್ಲದೆ, ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೂ ಈ ರೈಲು ನಿಲುಗಡೆ ಸಹಕಾರಿಯಾಗಲಿದೆ. ಬೆಂಗಳೂರಿನತ್ತ ನಿರಂತರವಾಗಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಿರುವುದರಿಂದ ರೈಲ್ವೆ ಇಲಾಖೆಗೆ ಕೂಡ ಉತ್ತಮ ಪ್ರಯಾಣಿಕರ ಸಂಖ್ಯೆ ಮತ್ತು ಆದಾಯ ದೊರೆಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

 

ಕಬಕ-ಪುತ್ತೂರಿನಲ್ಲಿ ವಂದೇ ಭಾರತ್ ರೈಲು ನಿಲ್ಲಿಸಬೇಕೆಂಬ ಬೇಡಿಕೆಗೆ ಈಗಾಗಲೇ ಸಾರ್ವಜನಿಕರಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪುತ್ತೂರು–ಸುಬ್ರಹ್ಮಣ್ಯ ರೈಲು ಬಳಕೆದಾರರ ಸಮಿತಿ ನಡೆಸಿದ ಆನ್‌ಲೈನ್ ಸಹಿ ಅಭಿಯಾನದಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಬೆಂಬಲ ದಾಖಲಿಸಿದ್ದಾರೆ.

 

ಸಾರ್ವಜನಿಕರ ಈ ಬೇಡಿಕೆಯನ್ನು ಪರಿಗಣಿಸಿರುವ ಕಿಶೋರ್ ಕುಮಾರ್ ಪುತ್ತೂರು ಅವರು ಇದೀಗ ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ವಿಷಯವನ್ನು ತಂದು, ಕಬಕ-ಪುತ್ತೂರು ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ನಿಲುಗಡೆ ನೀಡುವಂತೆ ಒತ್ತಾಯಿಸಿದ್ದಾರೆ.