10 September 2026 |

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

  • 10 Sep 2026 08:27:16 AM

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿಕೃತ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

 

ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್. ಪೂಜಾರಿ ಅವರು ಇದೀಗ ಜಿಲ್ಲಾ ಕಾಂಗ್ರೆಸ್ ಸಂಘಟನೆಯ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ನೇಮಕಾತಿಗೆ ಸಂಬಂಧಿಸಿದ ಆದೇಶವನ್ನು ಪ್ರಕಟಿಸಿದ್ದಾರೆ. ಈ ನೇಮಕಾತಿಗಳು ಸೆಪ್ಟೆಂಬರ್ 9, 2026ರಿಂದಲೇ ಜಾರಿಗೆ ಬಂದಿವೆ ಎಂದು ಅವರು ತಿಳಿಸಿದ್ದಾರೆ.

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಕೆಪಿಸಿಸಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

 

ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಮತ್ತು ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸುವುದು ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಜವಾಬ್ದಾರಿಗಳಾಗಿವೆ.

 

ರಾಜ್ಯಾದ್ಯಂತ ಒಟ್ಟು 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಅದರ ಭಾಗವಾಗಿ ದಕ್ಷಿಣ ಕನ್ನಡಕ್ಕೂ ಹೊಸ ಅಧ್ಯಕ್ಷರನ್ನು ಘೋಷಿಸಲಾಗಿದೆ.