ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) ತಮ್ಮ 76ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 1950ರ ಸೆಪ್ಟೆಂಬರ್ 17ರಂದು ಗುಜರಾತ್‌ನ ವಡ್ನಗರದಲ್ಲಿ ಜನಿಸಿದ ನರೇಂದ್ರ ಮೋದಿ ಅವರು, 2014ರಿಂದ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಪ್ರಧಾನಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಆರಂಭಿಸುತ್ತಿದೆ. ಈ ಅಭಿಯಾನದಡಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ಶಿಬಿರಗಳು, ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಂದು ಮನೆಗಳಲ್ಲಿ ದೀಪ ಬೆಳಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಜನರಿಗೆ ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತಿದೆ. ಗುಜರಾತ್‌ನಿಂದ ವಾರಾಣಸಿವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.





