ಉಧಂಪುರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ನಡೆದ ಭದ್ರತಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರು ಎಂದು ಶಂಕಿಸಲಾಗಿರುವ ಈ ಉಗ್ರರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.
ಸೋಹನ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.
ಗುರುವಾರ ಮುಂಜಾನೆ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ. ಮೃತರು ವಿದೇಶಿ ಉಗ್ರರಾಗಿರಬಹುದು ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸ್ಥಳದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಷ್ಟ್ರೀಯ ರೈಫಲ್ಸ್, ಪ್ಯಾರಾ ವಿಶೇಷ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಸೆಪ್ಟೆಂಬರ್ 5ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಯಬಾ ಕಮಾಂಡರ್‌ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು. ಅದರ ಬೆನ್ನಲ್ಲೇ ಉಧಂಪುರದಲ್ಲಿ ನಡೆದ ಈ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ.
ಯಾಸಿರ್ ಎಂದು ಗುರುತಿಸಲಾಗಿದ್ದ ಆ ಉಗ್ರ ಲಷ್ಕರ್-ಎ-ತಯ್ಯಬಾದ ಸೈಮನ್ ಮೂಸಾ ಗುಂಪಿನೊಂದಿಗೆ ಹಿಂದೆ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಆತ ಆ ಗುಂಪಿನಿಂದ ಬೇರ್ಪಟ್ಟು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.





