19 September 2026 |

ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ: ಕಟ್ಟಡ ಪರವಾನಿಗೆ, 400 ಅರ್ಜಿಗಳ ಆರೋಪದ ಕುರಿತು ಪರಿಶೀಲನೆ

  • 17 Sep 2026 08:12:45 PM

ಉಡುಪಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದರು.

 

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪ ಸೇರಿದಂತೆ ಪಂಚಾಯಿತಿ ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದರು. ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಕಚೇರಿಗೆ ಭೇಟಿ ನೀಡಿತ್ತು.

 

ಕಟ್ಟಡ ಪರವಾನಿಗೆ ಅರ್ಜಿಗಳ ವಿಲೇವಾರಿ, ಸಾರ್ವಜನಿಕರಿಗೆ ಸೇವೆ ಒದಗಿಸುವ ಪ್ರಕ್ರಿಯೆ ಹಾಗೂ ಸಂಬಂಧಿತ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದರು.

 

ಇದರೊಂದಿಗೆ ಚುನಾವಣೆಯ ಸಂದರ್ಭದಲ್ಲಿ ಮನೆ ನಿವೇಶನ ನೀಡುವುದಾಗಿ ಭರವಸೆ ನೀಡಿ ಗ್ರಾಮಸ್ಥರಿಂದ ಸುಮಾರು 400 ಅರ್ಜಿಗಳನ್ನು ಪಡೆಯಲಾಗಿದೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಅರ್ಜಿಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಪಂಚಾಯಿತಿಯಲ್ಲಿ ನಡೆದಿರುವ ಪ್ರಕ್ರಿಯೆಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.

 

ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲುಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಕಲ್ಲುಕೋರೆಗಳಿಗೆ ಸಂಬಂಧಿಸಿದ ಅನುಮತಿ, ದಾಖಲೆಗಳು ಹಾಗೂ ಪಂಚಾಯಿತಿಯ ಕ್ರಮಗಳ ಕುರಿತು ಮಾಹಿತಿಯನ್ನು ಪಡೆದುಕೊಳ್ಳಲಾಯಿತು.

 

ಸಾರ್ವಜನಿಕ ದೂರಿನ ಆಧಾರದ ಮೇಲೆ ನಡೆದಿರುವ ಈ ಪರಿಶೀಲನೆಯ ಬಳಿಕ, ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಏನು ಎಂಬುದು ಸ್ಪಷ್ಟವಾಗಬೇಕಿದೆ.