21 September 2026 |

ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

  • 21 Sep 2026 05:13:50 PM

ನವದೆಹಲಿ: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. 

 

ಮರು ತನಿಖೆಗಾಗಿ ಕರ್ನಾಟಕ ಸರ್ಕಾರವು ಹೊಸ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಈ ತಂಡದಲ್ಲಿ ಪ್ರಕರಣದ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್, CID ಅಥವಾ CBI ಅಧಿಕಾರಿಗಳನ್ನು ಸೇರಿಸಬಾರದು ಎಂದು ನಿರ್ದೇಶಿಸಲಾಗಿದೆ. 

 

ಸೌಜನ್ಯಳ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹಿಂದಿನ ತನಿಖೆಗೆ ಸಂಬಂಧಿಸಿದ ಕೆಲವು ಅಂಶಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಬಳಿಕ ಇದೀಗ ಮರು ತನಿಖೆಗೆ ಆದೇಶಿಸಿದೆ.

 

ಪ್ರಕರಣದಲ್ಲಿ ಈ ಹಿಂದೆ ಬಂಧಿಸಲ್ಪಟ್ಟಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ CBI ವಿಶೇಷ ನ್ಯಾಯಾಲಯವು ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿತ್ತು. ಅವರ ಖುಲಾಸೆಯ ಬಳಿಕ ಸೌಜನ್ಯ ಪ್ರಕರಣದಲ್ಲಿ ಹೊಣೆಗಾರರು ಯಾರು ಎಂಬ ಪ್ರಶ್ನೆ ಇನ್ನೂ ಬಾಕಿಯೇ ಉಳಿದಿತ್ತು. 

 

ಇದೀಗ ಸುಪ್ರೀಂ ಕೋರ್ಟ್ ಆದೇಶದಂತೆ ಹೊಸ SIT ಪ್ರಕರಣವನ್ನು ಮತ್ತೆ ತನಿಖೆ ನಡೆಸಲಿದ್ದು, ಮೂರು ತಿಂಗಳೊಳಗೆ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.