ಶಿಕ್ಷಣ ಸಲಹಾ ಸಂಸ್ಥೆಯೊಂದನ್ನು ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮದೇ ಕಚೇರಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಚೆಮ್ನಾಡ್ ಪಂಚಾಯತ್ ವ್ಯಾಪ್ತಿಯ ಪೊಯಿನಾಚಿಯ ಕೋಲಮ್ಕುನ್ನು ನಿವಾಸಿ ಎನ್. ಹರಿಕೃಷ್ಣನ್ (32) ಎಂದು ಗುರುತಿಸಲಾಗಿದೆ. ಅವರು ಉಡ್ಮಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹರಿಕೃಷ್ಣನ್ ಅವರು ಸೋಮವಾರ ಬೆಳಗ್ಗೆ 10 ಗಂಟೆಯಿಂದ ನಾಪತ್ತೆಯಾಗಿದ್ದರು. ಮಂಗಳವಾರವೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.
ಈ ವೇಳೆ ಪೊಲೀಸರು ಹಾಗೂ ಕುಟುಂಬಸ್ಥರು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ, ಪೊಯಿನಾಚಿಯಲ್ಲಿರುವ ಅವರ ಕಚೇರಿಯಲ್ಲಿ ಮಧ್ಯಾಹ್ನ ಸುಮಾರು 2 ಗಂಟೆಗೆ ಹರಿಕೃಷ್ಣನ್ ಮೃತಪಟ್ಟಿರುವುದು ಪತ್ತೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.





