ಬಂಟ್ವಾಳ: ತಾಲೂಕಿನ ಮಾಣಿ–ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಬಳಿ ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದ್ದು, ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು.
ಕಲ್ಲಡ್ಕದಿಂದ ವಾಹನದಲ್ಲಿ ಆಗಮಿಸಿದ್ದ ಹರೀಶ್ ಅವರು ದಾಸಕೋಡಿಯಲ್ಲಿ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ವೇಳೆ ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ರಸ್ತೆ ದಾಟುತ್ತಿದ್ದ ಹರೀಶ್ ಅವರಿಗೆ ಡಿಕ್ಕಿ ಹೊಡೆದಿದೆ. ಸಂಜೆ ಸುಮಾರು 6.45ರ ವೇಳೆಗೆ ಅಪಘಾತ ನಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹರೀಶ್ ಅವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಗತ್ಯ ಕ್ರಮಕ್ಕಾಗಿ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.





