03 October 2026 |

ಮಾಡೂರು ಯುಸೂಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ

  • 02 Oct 2026 11:04:29 AM

ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

 

2015ರ ನವೆಂಬರ್ 2ರಂದು ಮಂಗಳೂರು ಕಾರಾಗೃಹದೊಳಗೆ ಮಾಡೂರು ಯುಸೂಫ್ ಹತ್ಯೆಯಾಗಿದ್ದ. ಘಟನೆ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ಪೂರ್ಣಗೊಳಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 1ರಂದು ತೀರ್ಪು ಪ್ರಕಟಿಸಿದ್ದಾರೆ.

 

ತೀರ್ಪಿನಂತೆ ಲಿತೇಶ್ ಪೂಜಾರಿ ಅಲಿಯಾಸ್ ಲಿತ್ತು, ಶೋಭರಾಜ್ ಅಲಿಯಾಸ್ ಶೋಭಿ, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ಅಲಿಯಾಸ್ ಉಮೇಶ್ ಕುಂಬಾರ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಐವರು ಆರೋಪಿಗಳಿಗೆ ಒಟ್ಟು ₹76,000 ದಂಡವನ್ನೂ ನ್ಯಾಯಾಲಯ ವಿಧಿಸಿದೆ.

 

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಮೋಹನ್ ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ತನಿಖೆಯನ್ನು ಅಂದಿನ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ತಿಲಕ್ ಚಂದ್ರ ನಡೆಸಿ, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.