ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಿದರು.
ಕಾಲೇಜಿನಲ್ಲಿ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸುವುದು, ಗ್ರಾಮೀಣ ಪ್ರದೇಶಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಿಸುವುದು ಸೇರಿದಂತೆ ಹಲವು ವಿಚಾರಗಳನ್ನು ವಿದ್ಯಾರ್ಥಿಗಳು ಶಾಸಕರ ಗಮನಕ್ಕೆ ತಂದರು.
ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿದ ಶಾಸಕರು, ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ₹50 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು. ಮನೆ ಇಲ್ಲದ ಅರ್ಹರಿಗೆ ನಿವೇಶನ ಒದಗಿಸುವುದರ ಜೊತೆಗೆ ಮನೆ ನಿರ್ಮಾಣಕ್ಕಾಗಿ ₹2 ಲಕ್ಷ ನೆರವು ನೀಡುವ ಭರವಸೆಯನ್ನೂ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಮೂಲಕ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು.





