06 October 2026 |

ಪುತ್ತೂರಿನಲ್ಲಿ ಅಕ್ರಮ ಗೋವು ಸಾಗಾಟ ಪತ್ತೆ; 11 ಜಾನುವಾರುಗಳ ರಕ್ಷಣೆ, ಓರ್ವ ಬಂಧನ

  • 06 Oct 2026 10:17:04 AM

ಪುತ್ತೂರು: ಪಿಕಪ್ ವಾಹನದಲ್ಲಿ ಯಾವುದೇ ಅಧಿಕೃತ ಅನುಮತಿ ಇಲ್ಲದೆ ಜಾನುವಾರುಗಳನ್ನು ಕೇರಳದತ್ತ ಸಾಗಿಸುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ 11 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಅಕ್ರಮವಾಗಿ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪದಡಿ ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಲಾಗಿದೆ.

 

ಅಕ್ಟೋಬರ್ 5ರಂದು ಮುಂಜಾನೆ ಜಾನುವಾರುಗಳನ್ನು ಅಕ್ರಮವಾಗಿ ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಇದರ ಆಧಾರದ ಮೇಲೆ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ನೇತೃತ್ವದ ತಂಡ ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ವಾಹನ ತಡೆದು ಪರಿಶೀಲನೆ ನಡೆಸಿತು.

 

ಪೊಲೀಸರನ್ನು ಗಮನಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಮತ್ತೋರ್ವ ವ್ಯಕ್ತಿ ಪಿಕಪ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ವಾಹನವನ್ನು ಪರಿಶೀಲಿಸಿದಾಗ 11 ಜಾನುವಾರುಗಳನ್ನು ಯಾವುದೇ ಪರವಾನಗಿ ಇಲ್ಲದೆ ಅಮಾನವೀಯ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿದೆ.

 

ಜಾನುವಾರುಗಳನ್ನು ಕೇರಳಕ್ಕೆ ಕೊಂಡೊಯ್ದು ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶವಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಅಗತ್ಯ ದಾಖಲೆಗಳು ಮತ್ತು ಅನುಮತಿ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

 

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 125/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.