ಬಂಟ್ವಾಳ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅನುದಾನದಲ್ಲಿ ಬಿ.ಸಿ.ರೋಡ್‌ನಿಂದ ಪುಂಜಾಲಕಟ್ಟೆವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಬಿ.ಸಿ.ರೋಡ್ ಜಂಕ್ಷನ್‌ನಿಂದ ಗಾಣದಪಡ್ಪುವರೆಗೆ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ₹22.59 ಕೋಟಿ ಅನುದಾನ ಮಂಜೂರಾಗಿದೆ. ಇದೇ ವೇಳೆ ಗಾಣದಪಡ್ಪುವಿನಿಂದ ಪುಂಜಾಲಕಟ್ಟೆವರೆಗೆ ರಾಷ್ಟ್ರೀಯ ಹೆದ್ದಾರಿ 73ರ ರಸ್ತೆ ನಿರ್ವಹಣಾ ಕಾಮಗಾರಿಗೆ ₹34.63 ಕೋಟಿ ಅನುದಾನ ನೀಡಲಾಗಿದೆ.
ಈ ಎರಡೂ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಈ ಭಾಗದ ಸಂಚಾರ ವ್ಯವಸ್ಥೆ ಮತ್ತಷ್ಟು ಸುಧಾರಣೆಯಾಗಲಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.





