ಮಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಂದೆಯನ್ನು ಕೊಲೆ ಮಾಡಿರುವ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ. ಸುಮಾರು ಎರಡು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಪರೀಕ್ಷೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ ಅವರು ಜುಲೈ 19ರಂದು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರೊಂದಿಗೆ ವಾಸಿಸುತ್ತಿದ್ದ ಮಗಳು ಮಾಯಾ ರೇಗೋ, ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ತಂದೆಯ ಸಾವಿನ ಕುರಿತು ಕುಟುಂಬದ ಇತರ ಸದಸ್ಯರು ಹಾಗೂ ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡದೆ, ಆಪ್ತರ ನೆರವಿನಿಂದ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆ ಕುರಿತು ಅನುಮಾನ ವ್ಯಕ್ತಪಡಿಸಿದ ಆಲ್ಬರ್ಟ್ ರೇಗೋ ಅವರ ಸ್ನೇಹಿತರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮಾಯಾ ರೇಗೋ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿನ ನೈಜ ಕಾರಣವನ್ನು ಪತ್ತೆಹಚ್ಚಲು ಹೂಳಲಾಗಿದ್ದ ಮೃತದೇಹವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆ ನಡೆಸುವ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಇದೇ ವೇಳೆ, ಆಲ್ಬರ್ಟ್ ರೇಗೋ ಅವರಿಂದ ಬಲವಂತವಾಗಿ ವಿಲ್ ಬರೆಸಿಕೊಳ್ಳಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ. ಬಳಿಕ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದ್ದಾರೆ ಹಾಗೂ ಪೊಲೀಸರೊಂದಿಗೆ ಸೇರಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂಬ ಆರೋಪಗಳೂ ದೂರಿನಲ್ಲಿ ಉಲ್ಲೇಖವಾಗಿವೆ ಎಂದು ತಿಳಿದುಬಂದಿದೆ. ಈ ಆರೋಪಗಳು ಇನ್ನೂ ತನಿಖೆಯಿಂದ ದೃಢಪಡಬೇಕಿದೆ.
ಆಲ್ಬರ್ಟ್ ರೇಗೋ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಭವಿಷ್ಯಕ್ಕಾಗಿ ಸಾಕಷ್ಟು ಆಸ್ತಿ ಮಾಡಿಟ್ಟಿದ್ದರು ಎನ್ನಲಾಗಿದೆ. ಇಬ್ಬರೂ ಮಕ್ಕಳು ದುಬೈನಲ್ಲಿ ವಾಸಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಆಲ್ಬರ್ಟ್ ಅವರು ಮಗಳೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದಿದ್ದ ಆಲ್ಬರ್ಟ್ ರೇಗೋ ಅವರ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮೃತದೇಹದ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಸಾವಿನ ಹಿಂದಿನ ನೈಜ ಕಾರಣ ಬೆಳಕಿಗೆ ಬರಬೇಕಿದೆ.





