ಮಂಗಳೂರು: ‘ಮಂಗಳೂರು ದಸರಾ ಹಬ್ಬ’ದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಬೆಂದೂರ್‌ವೆಲ್‌ನ ಸೈಂಟ್ ಆಗ್ನೆಸ್ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಪರೀಕ್ಷೆಗಳನ್ನು ಬಹಿಷ್ಕರಿಸಿ, ಕಾಲೇಜಿನ ಪ್ರವೇಶ ದ್ವಾರದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಕರಾವಳಿಯ ಪ್ರಮುಖ ಉತ್ಸವಗಳಲ್ಲಿ ಒಂದಾದ ಮಂಗಳೂರು ದಸರಾ ನಡೆಯುತ್ತಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ಆಯೋಜಿಸಿರುವುದಕ್ಕೆ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ದಸರಾ ಆಚರಣೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪರೀಕ್ಷೆಗಳನ್ನು ಮುಂದೂಡುವಂತೆ ಕಾಲೇಜು ಆಡಳಿತ ಮಂಡಳಿಗೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರೂ, ಯಾವುದೇ ಸ್ಪಂದನೆ ದೊರೆತಿಲ್ಲ ಎಂಬುದು ವಿದ್ಯಾರ್ಥಿನಿಯರ ಆರೋಪವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಗಣಿಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿನಿಯರ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಬಲ ನೀಡಿದೆ. ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸಿ, ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಿವೆ.
ಸದ್ಯ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಪರೀಕ್ಷೆಗಳನ್ನು ಮುಂದೂಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಈ ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.





