17 October 2026 |

ಕಡಬ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

  • 16 Oct 2026 12:46:29 PM

ಉಪ್ಪಿನಂಗಡಿ, ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ದಂಡವನ್ನೂ ಪಾವತಿಸುವಂತೆ ಆದೇಶಿಸಿದೆ.

 

ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂದು ಗುರುತಿಸಲಾಗಿದೆ.

 

2021ರ ಮೇ 8ರಂದು ಈ ಘಟನೆ ನಡೆದಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸಿದ್ದ ಶೇಖರ್, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 40/2021ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಕಲಂ 376(2)(f)(n), 376(3) ಮತ್ತು 506 ಸೇರಿದಂತೆ ಪೋಕ್ಸೊ ಕಾಯ್ದೆಯ ಸಂಬಂಧಿತ ನಿಯಮಗಳಡಿ ಪ್ರಕರಣದ ತನಿಖೆ ಕೈಗೊಳ್ಳಲಾಗಿತ್ತು.

 

ಪ್ರಕರಣದ ತನಿಖೆಯನ್ನು ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ಯು. ಅವರು ನಡೆಸಿದ್ದರು. ತನಿಖೆಯ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ವೈಜ್ಞಾನಿಕ ಹಾಗೂ ಇತರ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

 

ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ದಂಡವನ್ನೂ ವಿಧಿಸಿದೆ. ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ಈ ತೀರ್ಪು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.