ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಕರ್ಬಸಂಕದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪುತ್ತೂರಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಶ್ವಿನ್ ಜೋಜೋ ಜಾರ್ಜ್ ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜಾರ್ಜ್ ಅವರ ಪುತ್ರ ಅಶ್ವಿನ್, ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ.
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕರ್ಬಸಂಕದ ಬಳಿ ಈ ದುರ್ಘಟನೆ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.





