ವೇಣೂರು: ಕೆಲಸದ ಸ್ಥಳದಲ್ಲಿ ಯುವತಿಯೊಬ್ಬಳಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ 61 ವರ್ಷದ ವ್ಯಕ್ತಿಯೊಬ್ಬರನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಆರೋಪಿಯಾಗಿದ್ದಾರೆ.
ಅಕ್ಟೋಬರ್ 24ರಂದು ಮಧ್ಯಾಹ್ನ, ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿ, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ ಹಣದ ಆಮಿಷವೊಡ್ಡುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸಂಬಂಧಿತ ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.





