ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೆಂತಲೆ ಎಂಬಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ದುರ್ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಕೆಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ. ಅಕ್ಟೋಬರ್ 25ರ ರಾತ್ರಿ ಮನೆಯ ಮುಂಭಾಗದ ಹಾಲ್ನಲ್ಲಿ ಅಮೃತ್ ಒಬ್ಬನೇ ಆಟವಾಡುತ್ತಿದ್ದನು. ಈ ಸಂದರ್ಭದಲ್ಲಿ ಕಿಟಕಿಗೆ ಕಟ್ಟಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದೆ. ಇದರಿಂದ ಉಸಿರಾಟಕ್ಕೆ ತೊಂದರೆಯಾಗಿ ಬಾಲಕ ಅಪಾಯಕ್ಕೆ ಸಿಲುಕಿದ್ದಾನೆ.
ಈ ವೇಳೆ ಅಮೃತ್ ಹಗ್ಗದಲ್ಲಿ ಸಿಲುಕಿ ಒದ್ದಾಡುತ್ತಿರುವುದನ್ನು ಗಮನಿಸಿದ ಆತನ ಸಹೋದರಿ ಪ್ರಾರ್ಥನಾ, ತಕ್ಷಣ ಸಮೀಪದಲ್ಲಿದ್ದ ಚಿಕ್ಕಪ್ಪನ ಮನೆಗೆ ತೆರಳಿ ವಿಷಯ ತಿಳಿಸಿದ್ದಾರೆ. ಕೂಡಲೇ ಮನೆಯವರು ಬಾಲಕನನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಆಟವಾಡುತ್ತಾ ಸಂತೋಷದಿಂದ ಇರಬೇಕಾಗಿದ್ದ ಪುಟ್ಟ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮಡುಗಟ್ಟಿದ್ದು, ಮನೆಯವರ ಆಕ್ರಂದನ ಮನಕಲಕುವಂತಿದೆ.





