ಮಂಗಳೂರು: ಪೊಲೀಸ್ ಕಿರುಕುಳದಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್‌ನಲ್ಲಿ ಮಂಗಳವಾರ ಸಂಜೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಮೃತ ಯುವಕನ ಶವವನ್ನಿಟ್ಟು ನೂರಾರು ಸ್ಥಳೀಯರು ಸುರತ್ಕಲ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೀಚ್‌ನಲ್ಲಿ ಯುವ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವಕ ಪೊಲೀಸ್ ತನಿಖೆ ಎದುರಿಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರ ವರ್ತನೆಯೇ ಸಾವಿಗೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಲ್ಲದೆ, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಪೊಲೀಸರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಎತ್ತಿದರು. ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳುತ್ತಿದ್ದಂತೆ ಸಾರ್ವಜನಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ನಡುವೆ ಸುದೀರ್ಘ ಮಾತುಕತೆ ನಡೆಯಿತು.
ಪ್ರತಿಭಟನಾಕಾರರು ಹಾಗೂ ಪೊಲೀಸರ ಕಡೆಯಿಂದ ದೂರುಗಳನ್ನು ಸ್ವೀಕರಿಸಿ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಭರತ್ ಶೆಟ್ಟಿ ಪೊಲೀಸರಿಗೆ ಸೂಚಿಸಿದರು. ಬಳಿಕ ಸ್ಥಳೀಯರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.





