ಮಣಿಪಾಲ: ಎದುರಾಳಿ ಗ್ಯಾಂಗ್‌ನ ಸದಸ್ಯರ ಮೇಲೆ ಹಲ್ಲೆ ನಡೆಸಲು ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ ಆರೋಪದ ಮೇಲೆ 26 ವರ್ಷದ ಮಹಮ್ಮದ್ ಪರ್ವೇಜ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕಿನ್ಸಿಮುಲ್ಕಿ ನಿವಾಸಿಯಾದ ಮಹಮ್ಮದ್ ಪರ್ವೇಜ್‌ನನ್ನು ಅಕ್ಟೋಬರ್ 24ರಂದು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರು ಸಿಬ್ಬಂದಿಯೊಂದಿಗೆ ಗಸ್ತು ತಿರುಗುತ್ತಿದ್ದ ವೇಳೆ, ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಮಹಮ್ಮದ್ ಪರ್ವೇಜ್‌ನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆತನ ಬಳಿಯಿಂದ ನೀಲಿ ಹಿಡಿಕೆಯ 20 ಇಂಚು ಉದ್ದದ ಕಬ್ಬಿಣದ ಲಾಂಗ್ ಹಾಗೂ ಹಸಿರು ಹಿಡಿಕೆಯ 16 ಇಂಚು ಉದ್ದದ ಕಬ್ಬಿಣದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ವಿಚಾರಣೆ ವೇಳೆ, ದಾವೂದ್, ಇಸಾಕ್ ಮತ್ತು ಗರುಡಾ ಗ್ಯಾಂಗ್‌ನ ಕೆಲವು ಸದಸ್ಯರೊಂದಿಗೆ ವೈಮನಸ್ಸು ಹೊಂದಿದ್ದು, ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ತಂದಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನ ವಿರುದ್ಧ ಈ ಹಿಂದೆಯೂ ಉಡುಪಿ ನಗರ, ಶಿರ್ವ, ಸೆನ್ ಹಾಗೂ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಅಥವಾ ಸೂಕ್ತ ಕಾರಣವಿಲ್ಲದೆ ಮಾರಕಾಸ್ತ್ರಗಳನ್ನು ಹೊಂದಿದ್ದ ಆರೋಪದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 175/2026ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 4 ಮತ್ತು 25(1B)(b) ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.





