29 October 2026 |

ಬಂಟ್ವಾಳದಲ್ಲಿ ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

  • 29 Oct 2026 09:10:35 AM

ಬಂಟ್ವಾಳ: ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ನ್ಯಾಯಾಲಯವು ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ಆರೋಪಿಗಳಿಗೆ ಒಟ್ಟು 88 ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ತೀರ್ಪು ಪ್ರಕಟಿಸಿದೆ.

 

2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿತ್ತು. ಸ್ಟುಡಿಯೋ ಮಾಲೀಕ ದಿನೇಶ್ ಅವರು ತಮ್ಮ ಸ್ಟುಡಿಯೋದಲ್ಲಿದ್ದ ಸಂದರ್ಭದಲ್ಲಿ, ಹಳೆಯ ದ್ವೇಷದ ಕಾರಣದಿಂದ ನಾಲ್ವರು ವ್ಯಕ್ತಿಗಳು ಒಳನುಗ್ಗಿ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

 

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ತನಿಖೆ ನಡೆಸಿ, ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿದ್ದರು. ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

 

ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 28ರಂದು ತೀರ್ಪು ಪ್ರಕಟಿಸಿ, ನಾಲ್ವರು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 88 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.