02 November 2026 |

ಸೆ.18ರಂದು ಪ್ರತಿವರ್ಷ ತುಳು ದಿನ ಆಚರಣೆ: ಸಚಿವ ಯು.ಟಿ. ಖಾದರ್ ಘೋಷಣೆ

  • 01 Nov 2026 05:28:39 PM

ಮಂಗಳೂರು: ತುಳು ಭಾಷೆಗೆ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ, ಪ್ರತಿವರ್ಷ ಸೆಪ್ಟೆಂಬರ್ 18ರಂದು 'ತುಳು ದಿನ' (ತುಳು ದಿವಸ) ಆಚರಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ.

 

ನಗರದ ನೆಹರು ಮೈದಾನದಲ್ಲಿ ನವೆಂಬರ್ 1ರಂದು ನಡೆದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ತುಳು ಭಾಷೆಗೆ ದೊರೆತಿರುವ ಈ ಮಾನ್ಯತೆಯು ತುಳುನಾಡಿನ ಜನರ ಹಲವು ವರ್ಷಗಳ ಹೋರಾಟ ಮತ್ತು ಬೇಡಿಕೆಗೆ ಸಿಕ್ಕ ಫಲವಾಗಿದೆ ಎಂದು ಹೇಳಿದರು.

 

ಪಂಚದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುವಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸಲಾಗಿದೆ. ಇದರಿಂದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕೆಂಬ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಲ್ಲದೆ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಪ್ರಯತ್ನಕ್ಕೂ ಈ ನಿರ್ಧಾರ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.