02 November 2026 |

ಬಂಟ್ವಾಳ: ಬೈಕ್‌ಗಳ ನಡುವೆ ಭೀಕರ ಅಪಘಾತ – ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸಾವು

  • 02 Nov 2026 09:59:32 AM

ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶಾರದ ಮಂಟಪದ ಸಮೀಪ ಅ.31ರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ಮೃತರನ್ನು 52 ವರ್ಷದ ಕಮಲಾಕ್ಷ ಆಚಾರ್ಯ ಎಂದು ಗುರುತಿಸಲಾಗಿದೆ.

 

ಅವರು ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಮಡಂತ್ಯಾರಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಲು ಮುಂದಾದ ಮತ್ತೊಂದು ಬೈಕ್‌ನ ಸವಾರನ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಕಮಲಾಕ್ಷ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

 

ಅಪಘಾತದ ತೀವ್ರತೆಗೆ ಕಮಲಾಕ್ಷ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.1ರಂದು ಅವರು ಮೃತಪಟ್ಟಿದ್ದಾರೆ.

 

ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ಬೈಕ್ ಸವಾರ ನಾಗೇಶ್ ಪೂಜಾರಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.