02 November 2026 |

ಅನ್ಯ ಕೋಮಿನ ಯುವಕನ ಕಿರುಕುಳದ ಆರೋಪ; ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

  • 02 Nov 2026 11:05:03 AM

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪದ ನಡುವೆ, ಮಂಗಳೂರಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ.

 

ಮೃತ ವಿದ್ಯಾರ್ಥಿನಿಯನ್ನು ಬಾಳಗೋಡು ಗ್ರಾಮದ ಭವಿತಾ ಮತ್ತು ನಾಗೇಶ್ ದಂಪತಿಯ ಪುತ್ರಿ ಹಿಮಾ ಎಂದು ಗುರುತಿಸಲಾಗಿದೆ. ನೌಶಾದ್ ಎಂಬ ಯುವಕನ ವಿರುದ್ಧ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

 

ಹಿಮಾ ಮತ್ತು ನೌಶಾದ್ ಇಬ್ಬರೂ ಬಾಲ್ಯದಲ್ಲಿ ಒಂದೇ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು ಎನ್ನಲಾಗಿದೆ. ಈ ಪರಿಚಯದ ಹಿನ್ನೆಲೆಯಲ್ಲಿ ನೌಶಾದ್, ಹಿಮಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ.

 

ಇಬ್ಬರೂ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ತೆಗೆದಿದ್ದ ಫೋಟೋಗಳನ್ನು ನೌಶಾದ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಇನ್ನಷ್ಟು ಫೋಟೋಗಳನ್ನು ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವೂ ಕೇಳಿಬಂದಿದೆ. ಫೋಟೋಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಹಿಮಾ ಹಲವು ಬಾರಿ ಮನವಿ ಮಾಡಿದ್ದರೂ, ಅವುಗಳನ್ನು ತೆಗೆದುಹಾಕಿರಲಿಲ್ಲ ಎನ್ನಲಾಗಿದೆ.

 

ಇದರಿಂದ ಮಾನಸಿಕವಾಗಿ ನೊಂದಿದ್ದ ಹಿಮಾ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

 

ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ದುಃಖ ಮುಗಿಲು ಮುಟ್ಟಿದೆ. ಹಿಮಾಳ ತಂದೆ ನಾಗೇಶ್ ಅವರು ಕೆಲ ದಿನಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ.

 

ವಿಷಯ ತಿಳಿದು ಶಾಸಕ ಸಿಮೆಂಟ್ ಮಂಜು ಅವರು ಮೃತ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಶಾದ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.