02 November 2026 |

ಬಂಟ್ವಾಳದಲ್ಲಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಓರ್ವ ಯುವಕನ ಬಂಧನ, ಮತ್ತೊಬ್ಬ ಪರಾರಿ!

  • 02 Nov 2026 02:14:43 PM

ಬಂಟ್ವಾಳ: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ವ್ಯಕ್ತಿ ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

 

ಬಂಧಿತನನ್ನು ಉಳ್ಳಾಲ ತಾಲೂಕಿನ ಬೋಳಿಯಾರ್ ನಿವಾಸಿ ಮಹಮ್ಮದ್ ನಾಸೀರ್ (29) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಅಕ್ಟೋಬರ್ 30ರಂದು ರಾತ್ರಿ ಸುಮಾರು 9.15ರ ವೇಳೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಗಸ್ತು ಕಾರ್ಯದಲ್ಲಿದ್ದರು. ಈ ಸಂದರ್ಭದಲ್ಲಿ ಪಾಣೆಮಂಗಳೂರಿನ ನೆಹರೂ ನಗರ ಅಂಡರ್‌ಪಾಸ್ ಸಮೀಪ ಇಬ್ಬರು ವ್ಯಕ್ತಿಗಳು ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು.

 

ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ತಂಡವನ್ನು ಕಂಡ ಇಬ್ಬರಲ್ಲಿ ಒಬ್ಬಾತ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.