03 November 2026 |

ಉಪ್ಪಿನಂಗಡಿ–ಗುರುವಾಯನಕೆರೆ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ: ಹೊಂಡಗುಂಡಿಗಳಿಗೆ ಬ್ಯಾನರ್ ಅಳವಡಿಸಿ ಆಕ್ರೋಶ

  • 03 Nov 2026 11:02:52 AM

ಉಪ್ಪಿನಂಗಡಿ: ಸಂಪೂರ್ಣ ಹೊಂಡಗುಂಡಿಗಳಿಂದ ಕೂಡಿರುವ ಉಪ್ಪಿನಂಗಡಿ–ಗುರುವಾಯನಕೆರೆ ರಸ್ತೆಯನ್ನು ತಕ್ಷಣ ಡಾಮರೀಕರಣಗೊಳಿಸಬೇಕು ಎಂದು ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ನವೆಂಬರ್ 2ರಂದು ಕಲ್ಲೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

 

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಲೋನ್ಸೆ ಫ್ರಾಂಕ್, ಸ್ಥಳೀಯ ಬಿಜೆಪಿ ಶಾಸಕ ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ರಾಜಕೀಯ ಸಂಘರ್ಷದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು. ರಸ್ತೆಯ ದುಸ್ಥಿತಿಯನ್ನು ಸರಿಪಡಿಸಿ ಆದಷ್ಟು ಬೇಗ ಸಂಪೂರ್ಣ ಡಾಮರು ಕಾಮಗಾರಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೊಡ್ರಿಗಸ್ ಮಾತನಾಡಿ, ಕಳೆದ ಐದು ವರ್ಷಗಳಿಂದ ಈ ರಸ್ತೆಯ ಸ್ಥಿತಿ ಹದಗೆಟ್ಟಿದ್ದು, ಪ್ರತಿನಿತ್ಯ ಸಂಚರಿಸುವ ವಾಹನ ಸವಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಸ್ತೆಯಲ್ಲಿನ ಗುಂಡಿಗಳಿಂದ ಅಪಘಾತಗಳು ಸಂಭವಿಸುತ್ತಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳ ಬಿಡಿಭಾಗಗಳಿಗೂ ಹಾನಿಯಾಗುತ್ತಿದೆ ಎಂದು ದೂರಿದರು.

 

ರಸ್ತೆಯ ಸಮಸ್ಯೆ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನಕ್ಕೆ ಬಂದಿದ್ದರೂ ಶಾಶ್ವತ ಪರಿಹಾರ ಕೈಗೊಳ್ಳದಿರುವುದು ಬೇಸರದ ಸಂಗತಿ. ತಾತ್ಕಾಲಿಕ ಗುಂಡಿ ಮುಚ್ಚುವ ಕಾಮಗಾರಿ ನಮಗೆ ಬೇಕಿಲ್ಲ. ರಸ್ತೆಗೆ ಸಂಪೂರ್ಣ ಡಾಮರೀಕರಣ ನಡೆಸಬೇಕು ಎಂದು ಆಗ್ರಹಿಸಿದರು.

 

ಪ್ರತಿಭಟನಾಕಾರರು ಹಾಡುಗಳ ಮೂಲಕ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಭರಿತವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯ ಹೊಂಡಗಳಲ್ಲಿ ಗಾಳ ಹಾಕಿ ಮೀನು ಹಿಡಿಯುವ ಅಣಕು ಪ್ರದರ್ಶನ ನಡೆಸುವ ಮೂಲಕ ಶಾಸಕರು ಸ್ಥಳಕ್ಕೆ ಬಂದು ರಸ್ತೆಯ ಪರಿಸ್ಥಿತಿಯನ್ನು ಪರಿಶೀಲಿಸಲಿ ಎಂದು ಒತ್ತಾಯಿಸಿದರು.

 

ಇದೇ ವೇಳೆ ಸಂಸದರ ಕಾರ್ಯವೈಖರಿಯನ್ನೂ ಟೀಕಿಸಿದ ಪ್ರತಿಭಟನಾಕಾರರು, ಸಂಸದರು ಇದ್ದರೂ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದರು. ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರ ಸಂಕಷ್ಟ ಮತ್ತು ಅವರ ಆಕ್ರೋಶವನ್ನು ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

 

ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಗೋಪಾಲ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಅವರು, ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

 

ವ್ಯಂಗ್ಯ ಪೋಸ್ಟರ್ ಮೂಲಕ ಆಕ್ರೋಶ:

ರಸ್ತೆಯಲ್ಲಿ ಸಂಚರಿಸುವಾಗ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ವ್ಯಂಗ್ಯಚಿತ್ರಗಳ ಮೂಲಕ ಬಿಂಬಿಸಿ, ಶಾಸಕ ಹರೀಶ್ ಪೂಂಜ ಹಾಗೂ ಅಶೋಕ್ ರೈ ಅವರ ಭಾವಚಿತ್ರಗಳನ್ನು ಒಳಗೊಂಡ ಫ್ಲೆಕ್ಸ್‌ಗಳನ್ನು ಅಳವಡಿಸುವ ಮೂಲಕ ಪ್ರತಿಭಟನಾಕಾರರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.