07 November 2026 |

ಮಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ!

  • 07 Nov 2026 11:45:52 AM

ಮಂಗಳೂರು: ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 73ರ ಕಣ್ಣೂರಿನ ಮಸೀದಿ ಸಮೀಪ ಶುಕ್ರವಾರ (ನ.6) ರಾತ್ರಿ ನಡೆದಿದೆ.

 

ಲಾರಿಯು ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿ ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

 

ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು. ಮತ್ತೊಂದೆಡೆ, ಸಂಚಾರ ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಿದರು.