ಮಂಡ್ಯ: ನಗರದ ಹೊರವಲಯದಲ್ಲಿರುವ ವಿಸಿ ಫಾರಂ ರೈಲ್ವೆ ಗೇಟ್ ಸಮೀಪ ರೈಲಿಗೆ ಸಿಲುಕಿ ವಿವಾಹಿತ ಮಹಿಳೆ ಹಾಗೂ ಯುವಕ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಬೆಂಗಳೂರಿನ ಮೂಲದ ಸಹನಾ (25) ಮತ್ತು ರಾಹುಲ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಹನಾ ಸುಮಾರು ಎಂಟು ವರ್ಷಗಳ ಹಿಂದೆ ವೀರೇಶ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ ಆರು ವರ್ಷದ ಹೆಣ್ಣು ಮಗು ಹಾಗೂ ಎರಡು ವರ್ಷದ ಗಂಡು ಮಗುವಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ವೀರೇಶ್ ಅವರೊಂದಿಗೆ ಸಹನಾ ಕಳೆದ ಎರಡು-ಮೂರು ವರ್ಷಗಳಿಂದ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು.





