ಮಂಗಳೂರು: ನಗರದ ಅತ್ತಾವರ ಕಟ್ಟೆ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿರುವ ಲಾಡ್ಜ್‌ವೊಂದರಲ್ಲಿ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ಕೊಠಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನೆಲಮಹಡಿ ಸೇರಿದಂತೆ ನಾಲ್ಕು ಮಹಡಿಗಳನ್ನು ಹೊಂದಿರುವ ಈ ಕಟ್ಟಡದ ಮೊದಲ ಮಹಡಿಯಿಂದ ಮೇಲಿನ ಭಾಗದಲ್ಲಿ ಲಾಡ್ಜ್ ಕಾರ್ಯನಿರ್ವಹಿಸುತ್ತಿದೆ. ಸೋಮವಾರ ರಾತ್ರಿ ನಾಲ್ಕನೇ ಮಹಡಿಯಲ್ಲಿರುವ ಕೊಠಡಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಕೊಠಡಿಯ ಕಿಟಕಿಯಿಂದ ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ಲಾಡ್ಜ್‌ನಲ್ಲಿದ್ದ ಇತರರು ಭಯಭೀತರಾಗಿದ್ದಾರೆ. ತಕ್ಷಣವೇ ಕಟ್ಟಡದಲ್ಲಿದ್ದವರು ಕೆಳಗೆ ಧಾವಿಸಿ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಠಡಿಯಲ್ಲಿದ್ದ ಹವಾನಿಯಂತ್ರಣ ಯಂತ್ರದಲ್ಲಿ (ಎಸಿ) ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಅಗ್ನಿ ಅವಘಡದ ಮಾಹಿತಿ ಲಭಿಸುತ್ತಿದ್ದಂತೆ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಅಗ್ನಿಶಾಮಕ ವಾಹನದೊಂದಿಗೆ ಸ್ಥಳಕ್ಕೆ ಧಾವಿಸಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನವಾಜ್ ಹಾಗೂ ಠಾಣಾಧಿಕಾರಿ ಪ್ರವೀಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತಂದರು. ಬೆಂಕಿ ಅಕ್ಕಪಕ್ಕದ ಕೊಠಡಿಗಳಿಗೆ ಹರಡದಂತೆ ಎಚ್ಚರಿಕೆ ವಹಿಸಿ ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.
ಘಟನೆಯಲ್ಲಿ ಕೊಠಡಿಯಲ್ಲಿದ್ದ ಎಸಿ, ಮಂಚ, ಹಾಸಿಗೆ, ಫ್ಯಾನ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಬೆಂಕಿ ಕಟ್ಟಡದ ಇತರ ಭಾಗಗಳಿಗೆ ಹರಡುವುದು ತಪ್ಪಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆಗಟ್ಟಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನಕರ ಸಂಗತಿಯಾಗಿದೆ.





