ವಿಟ್ಲ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ, ಕೂಲಿ ಕಾರ್ಮಿಕ ಪುರುಷೋತ್ತಮ ಪೂಜಾರಿ (38) ಎಂದು ಗುರುತಿಸಲಾಗಿದೆ.
ಪುರುಷೋತ್ತಮ ಪೂಜಾರಿ ಅವರು ಸೂರಿಕುಮೇರು ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿದ್ದು, ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.





