10 November 2026 |

ಆಂಧ್ರಪ್ರದೇಶದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: 35 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

  • 10 Nov 2026 02:23:27 PM

ಆಂಧ್ರಪ್ರದೇಶ: ರಾಜ್ಯದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಖಾಸಗಿ ಎಸಿ ಬಸ್‌ನ ಹಿಂಬದಿ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಆದರೆ, ಬಸ್‌ನಲ್ಲಿದ್ದ 35 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

 

ಕಡಪದಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮಂಗಳವಾರ ಮುಂಜಾನೆ ಸುಮಾರು 1 ಗಂಟೆಗೆ ಪ್ರಯಾಣ ಆರಂಭಿಸಿತ್ತು. ಮಾರ್ಗಮಧ್ಯೆ ಬಸ್‌ನ ಹಿಂಬದಿ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.

 

ಚಾಲಕ ಕೆಳಗಿಳಿದು ಪರಿಶೀಲಿಸುವಷ್ಟರಲ್ಲಿ ಟೈರ್ ಸ್ಫೋಟದಿಂದ ಉಂಟಾದ ಕಿಡಿ ಮತ್ತು ಶಾಖಕ್ಕೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ವ್ಯಾಪಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ತಕ್ಷಣ ಕಾರ್ಯಪ್ರವೃತ್ತರಾಗಿ ತುರ್ತು ನಿರ್ಗಮನ ದ್ವಾರ ಹಾಗೂ ಮುಂಭಾಗದ ಬಾಗಿಲಿನ ಮೂಲಕ ಎಲ್ಲಾ 35 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

 

ಅಷ್ಟೇ ಅಲ್ಲದೆ, ಬಸ್‌ನಲ್ಲಿದ್ದ ಪ್ರಯಾಣಿಕರ ಲಗೇಜ್‌ಗಳನ್ನು ಕೂಡ ಹೊರತೆಗೆದು ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದರೂ, ಚಾಲಕನ ಸಮಯಪ್ರಜ್ಞೆ ಮತ್ತು ತಕ್ಷಣದ ನಿರ್ಧಾರದಿಂದಾಗಿ 35 ಪ್ರಯಾಣಿಕರ ಜೀವ ಉಳಿದಿದ್ದು, ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ.