ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 43 ವರ್ಷದ ವ್ಯಕ್ತಿಯೊಬ್ಬರು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶೇರಾ ಎಂಬಲ್ಲಿ ನವೆಂಬರ್ 9ರಂದು ನಡೆದಿದೆ.
ಶೇರಾ ನಿವಾಸಿ ಪಿ. ನವೀನ್ (43) ಮೃತಪಟ್ಟವರು. ನವೆಂಬರ್ 9ರ ಬೆಳಗ್ಗೆ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದರು ಎನ್ನಲಾಗಿದೆ.
ಇದರಿಂದ ಆತಂಕಗೊಂಡ ಪತ್ನಿ, ಕಿರಿಯ ಮಗನನ್ನು ಮನೆಗೆ ಕಳುಹಿಸಿ ತಂದೆಯ ಬಗ್ಗೆ ವಿಚಾರಿಸಿಕೊಂಡು ಬರುವಂತೆ ತಿಳಿಸಿದ್ದರು. ಮನೆಗೆ ತೆರಳಿದ ಮಗನಿಗೆ ತಂದೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ತಕ್ಷಣ ಪತ್ನಿ, ಮಗಳು ಹಾಗೂ ಸಂಬಂಧಿಕರು ಸ್ಥಳಕ್ಕೆ ಧಾವಿಸಿ ನೇಣಿನ ಕುಣಿಕೆಯಿಂದ ನವೀನ್ ಅವರನ್ನು ಕೆಳಗಿಳಿಸಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನವೀನ್ ಅವರಿಗೆ ಅತಿಯಾದ ಮದ್ಯಪಾನದ ಅಭ್ಯಾಸವಿದ್ದು, ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ. ಮಾನಸಿಕ ಖಿನ್ನತೆ ಹಾಗೂ ಜೀವನದ ಮೇಲಿನ ನಿರಾಸೆಯಿಂದ ಅವರು ಈ ನಿರ್ಧಾರ ಕೈಗೊಂಡಿರಬಹುದು ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದೂ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.





